ವಿಟ್ಲ, ಜೂನ್ 25: ಅಪ್ರಾಪ್ತ ವಯಸ್ಕರಿಗೆ ಮದ್ಯದ ಪ್ರವೇಶ ಹಾಗೂ ಸೇವೆಯನ್ನು ತಡೆಯುವ ನಿಟ್ಟಿನಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಗುರುವಾರ ಬಾರ್ ಎಂಡ್ ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ ನಡೆಯಿತು.
ಪೊಲೀಸ್ ಇನ್ಸ್‌ಪೆಕ್ಟರ್ (ಪಿಐ) ಪ್ರಕಾಶ್ ದೇವಾಡಿಗ ಅವರ ಮಾರ್ಗದರ್ಶನದಲ್ಲಿ ಹಾಗೂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ರಾಮಕೃಷ್ಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮದ್ಯ ಮಾರಾಟ ಮತ್ತು ಸೇವೆಗೆ ಸಂಬಂಧಿಸಿದ ಕಾನೂನು ನಿಯಮಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.
ಸಭೆಯಲ್ಲಿ ಅಪ್ರಾಪ್ತ ವಯಸ್ಕರಿಗೆ ಯಾವುದೇ ಕಾರಣಕ್ಕೂ ಮದ್ಯದ ಅಂಗಡಿಗಳಿಗೆ ಪ್ರವೇಶ ಅಥವಾ ಸೇವೆ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಮದ್ಯ ಖರೀದಿ ಅಥವಾ ಸೇವನೆಗಾಗಿ ಬರುವ ವ್ಯಕ್ತಿಗಳಿಂದ ಸರ್ಕಾರದಿಂದ ಮಾನ್ಯತೆ ಪಡೆದ ವಯಸ್ಸಿನ ಪುರಾವೆ ಅಥವಾ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ತಿಳಿಸಲಾಯಿತು. ಸೂಕ್ತ ಗುರುತಿನ ಚೀಟಿ ಇಲ್ಲದ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವ ಸಂಸ್ಥೆಗಳು ಹಾಗೂ ಸ್ಥಳಗಳಿಗೆ ಪ್ರವೇಶ ನೀಡಬಾರದು ಎಂದು ಸೂಚಿಸಲಾಯಿತು.
ಅಲ್ಲದೆ, ಅಪ್ರಾಪ್ತ ವಯಸ್ಕರಿಗೆ ಮದ್ಯವನ್ನು ಪೂರೈಸುವುದು, ಮಾರಾಟ ಮಾಡುವುದು ಅಥವಾ ಅಂತಹ ಚಟುವಟಿಕೆಗಳಿಗೆ ಬೆಂಬಲ ನೀಡುವುದು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವುದು ಹಾಗೂ ಅಪ್ರಾಪ್ತ ವಯಸ್ಕರನ್ನು ಮದ್ಯದ ದುಷ್ಪರಿಣಾಮಗಳಿಂದ ರಕ್ಷಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಬಾರ್, ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.



























