ಮಂಗಳೂರು, ಜೂನ್ 26: ನಗರದ ಬೆಂದೂರಿನ ಲಾಡ್ಜ್ ಒಂದರಲ್ಲಿ ಎಂಡಿಎಂಎ (MDMA) ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ನದೀಂ, ಉಮರುಲ್ ಫಾರೂಕ್ ಹಾಗೂ ಇಮ್ಮಿಯಾಜ್ ಇಸ್ಮಾಯಿಲ್ ಕಿನ್ಯಾ ಎಂದು ಗುರುತಿಸಲಾಗಿದೆ.
ದಾಳಿಯ ವೇಳೆ ಆರೋಪಿಗಳಿಂದ 35.53 ಗ್ರಾಂ ಎಂಡಿಎಂಎ ಹಾಗೂ ₹7,030 ನಗದು ವಶಪಡಿಸಿಕೊಳ್ಳಲಾಗಿದೆ.
ಬಳಿಕ ಆರೋಪಿಗಳನ್ನು ಕದ್ರಿ ಪೊಲೀಸ್ ಠಾಣೆ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಾದಕ ವಸ್ತುಗಳ ಅಕ್ರಮ ಸಾಗಾಟ ಹಾಗೂ ಮಾರಾಟ ತಡೆಗೆ ಪೊಲೀಸ್ ಇಲಾಖೆ ಕಾರ್ಯಾಚರಣೆ ಮುಂದುವರಿಸಿದ್ದು, ಇಂತಹ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.



























