ವಿಟ್ಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ವಿಟ್ಲ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿ 4.5 ಲೀಟರ್ ವಿವಿಧ ಮಾದರಿಯ ಮದ್ಯ ಹಾಗೂ ₹300 ನಗದನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 26ರ ರಾತ್ರಿ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಕಾಶ ದೇವಾಡಿಗ ಅವರಿಗೆ ಮಂಗಿಲಪದವು ಬಸ್ ತಂಗುದಾಣದ ಬಳಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಕುರಿತು ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಬಂಧಿತನನ್ನು ವಿಟ್ಲ ಕಸಬಾ ನಿವಾಸಿ ಲಕ್ಷ್ಮಣಗೌಡ (54) ಎಂದು ಗುರುತಿಸಲಾಗಿದೆ. ಆತನ ಬಳಿಯಿದ್ದ ಚೀಲವನ್ನು ಪರಿಶೀಲಿಸಿದಾಗ ಒಟ್ಟು 4.5 ಲೀಟರ್ ವಿವಿಧ ಮಾದರಿಯ ಮದ್ಯ ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಲಾಗಿದೆ ಎನ್ನಲಾದ ₹300 ನಗದು ಪತ್ತೆಯಾಗಿದೆ.
ಯಾವುದೇ ಪರವಾನಿಗೆ ಇಲ್ಲದೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಮದ್ಯವನ್ನು ಸಂಗ್ರಹಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 141/2026ರಡಿ ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 15, 32 ಹಾಗೂ 34ರ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.


























