ಮಂಗಳೂರು, ಜೂನ್ 27: ಮಂಗಳೂರು ನಗರದ ಎಕ್ಕೂರು–ಸೂಟರ್‌ಪೇಟೆ ರಸ್ತೆಯಲ್ಲಿ ನಡೆದಿದ್ದ ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು ಪ್ರಕರಣವನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಜೂನ್ 14ರಂದು ಮಧ್ಯಾಹ್ನ ಸುಮಾರು 12.30ಕ್ಕೆ ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್‌ಪೇಟೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿದ್ದ ₹1.50 ಲಕ್ಷ ಮೌಲ್ಯದ ಚಿನ್ನದ ಸರವನ್ನು, ವಿಳಾಸ ಕೇಳುವ ನೆಪದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜೂನ್ 26ರಂದು ಬೆಳಿಗ್ಗೆ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಅವರು ಸರ ಕಳವು ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ.
ಆರೋಪಿಗಳಾದ ರವಿ ಬೌರಾ (38) ಹಾಗೂ ಮೊಹಮ್ಮದ್ ಸಾಹಿಲ್ @ ಸಿದ್ದೀಖಿ (26) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇಬ್ಬರನ್ನು ಜುಲೈ 6ರವರೆಗೆ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಇದೇ ವೇಳೆ ಬಾಗಲಕೋಟೆ ಮೂಲದ ಅಲ್ತಾಫ್ ಹುಸೈನ್ ಎಂಬ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವಿನಾಯಕ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣವನ್ನು ತ್ವರಿತವಾಗಿ ಭೇದಿಸಿದ್ದು, ತನಿಖೆ ಮುಂದುವರಿದಿದೆ.



























