ಉಳ್ಳಾಲ: ಕೊಣಾಜೆ ಸಮೀಪದ ನಾಟೆಕಲ್ ತಿರುವಿನಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರನಾಗಿದ್ದ ಇನ್ಫೋಸಿಸ್ ಉದ್ಯೋಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಸಹೋದ್ಯೋಗಿ ಯುವತಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ನಿಯಂತ್ರಣ ತಪ್ಪಿದ ಬಸ್ ಕಮರಿಗೆ ಉರುಳಿದ್ದು, ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕುವೆಂಪುನಗರ ನಿವಾಸಿ ಪ್ರಜ್ವಲ್ ಅರ್ನಾಲ್ಡ್ (30) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಅಕ್ಷತಾ ಎಂದು ತಿಳಿದುಬಂದಿದೆ.
ಪ್ರಜ್ವಲ್ ಹಾಗೂ ಅಕ್ಷತಾ ಅವರು ಕೊಣಾಜೆ ಕಂಬಳಪದವಿನಲ್ಲಿರುವ ಇನ್ಫೋಸಿಸ್‌ನ ಬಿಪಿಒ ವಿಭಾಗದಲ್ಲಿ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿ ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆ ಮೇಲೆ ಬಿದ್ದರೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದೆ.
ಅಪಘಾತದಲ್ಲಿ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


























