ಬಂಟ್ವಾಳ, ಜು. 6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆಗೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

























