ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ಅನಾವರಣಗೊಳಿಸಲಾಯಿತು.
ಹಿಂದೂ ಸಮಾಜದ ಏಕತೆ, ಧಾರ್ಮಿಕ ಮೌಲ್ಯಗಳ ಸಂರಕ್ಷಣೆ ಹಾಗೂ ಮಾತೆಯರು ಮತ್ತು ಸಹೋದರಿಯರನ್ನು ಸಂಘಟನಾತ್ಮಕವಾಗಿ ಒಗ್ಗೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಂಘಟಕರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು, ಮೊದಲ ವರ್ಷದ ವರಮಹಾಲಕ್ಷ್ಮಿ ಪೂಜೆಯಲ್ಲಿ 2,512 ಸೇವೆಗಳು ನಡೆದಿದ್ದರೆ, ಎರಡನೇ ವರ್ಷದಲ್ಲಿ ಅದು 5,471ಕ್ಕೆ ಏರಿಕೆಯಾಗಿದೆ. ಈ ಬಾರಿ 10,000ಕ್ಕೂ ಹೆಚ್ಚು ಸೇವೆಗಳು ನಡೆಯುವ ನಿರೀಕ್ಷೆ ಇದ್ದು, ಭಕ್ತಾದಿಗಳಿಂದ ಉತ್ತಮ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸನಾತನ ಧರ್ಮದ ಈ ಧಾರ್ಮಿಕ ಕಾರ್ಯಕ್ರಮದ ಯಶಸ್ಸಿಗೆ ಪುತ್ತೂರಿನ ಸಮಸ್ತ ಹಿಂದೂ ಬಾಂಧವರು ಸಹಕಾರ ನೀಡಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ವೀಣಾ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಗಳಾದ ಸ್ವಯಂ ಪ್ರಭಾ ಭಟ್, ಪವಿತ್ರಾ ದೊಡ್ಡಡ್ಕ, ಪ್ರತಿಭಾ ಒಕುಣ್ಣಾಯ, ರಜತಾ ಭಟ್ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು, ನಿರ್ದೇಶಕರು ಮತ್ತು ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

























