ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ್ ರೈ ಮಠಂತಬೆಟ್ಟು ಅವರು ಹೃದಯಾಘಾತದಿಂದ ನಿಧನ ಹೊಂದಿರುವುದು ಸಾರ್ವಜನಿಕ ವಲಯದಲ್ಲಿ ದುಃಖಕ್ಕೆ ಕಾರಣವಾಗಿದೆ.
ಮಾಜಿ ಸಚಿವ ಬಿ. ರಮಾನಾಥ ರೈ ಅವರು ನಿರಂಜನ್ ರೈ ಮಠಂತಬೆಟ್ಟು ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಬಿ. ರಮಾನಾಥ ರೈ, “ನಿರಂಜನ್ ರೈ ಮಠಂತಬೆಟ್ಟು ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದರು. ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಜನಪರ ಸೇವೆ ಸಲ್ಲಿಸಿ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ಸಮಾಜಕ್ಕೆ ಹಾಗೂ ಸಾರ್ವಜನಿಕ ಬದುಕಿಗೆ ತುಂಬಲಾರದ ನಷ್ಟವಾಗಿದೆ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು, ಬಂಧು-ಬಳಗ, ಸ್ನೇಹಿತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಅಗಲಿದ ಆತ್ಮಕ್ಕೆ ಶಾಂತಿ ಕೋರಿ ಗೌರವ ನಮನ ಸಲ್ಲಿಸಿದರು.

























