ಮುಂಡಾಜೆ: ಚಾರ್ಮಾಡಿ–ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟ್ ಕಾಡ್ ಸಮೀಪ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಇಂದು ಬೆಳಿಗ್ಗೆ ಚಾರ್ಮಾಡಿ–ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಕಾರುಗಳು ಸೀಟ್ ಕಾಡ್ ಬಳಿ ಪರಸ್ಪರ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ವಾಹನಗಳಿಗೆ ಭಾರೀ ಹಾನಿಯಾಗಿದೆ.
ಅಪಘಾತದಲ್ಲಿ ಮಂಗಳೂರು ಕಾವೂರು ಮೂಲದ ವಿನಿತಾ (22), ಗೌರಮ್ಮ (49), ಕೊಟ್ರೆಗೌಡ (55) ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಗಾಯಗೊಂಡಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಯಾರಿಗೂ ಪ್ರಾಣಾಪಾಯ ಇಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

























