ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಇರ್ಫಾನ್ (32) ಎಂದು ಗುರುತಿಸಲಾಗಿದೆ. ಈತ ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಪೊಲೀಸರ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಆರೋಪಿಯು ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ ಅಸಭ್ಯ ಸನ್ನೆಗಳನ್ನು ಮಾಡಿದ್ದಲ್ಲದೆ, ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 10ರಂದು ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

























