ಕಡಬ, ಜು.11: ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಕಡಬದಲ್ಲಿ ಯುವಕರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಪರಸ್ಪರ ದೂರುಗಳು ದಾಖಲಾಗಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಕಡಬ ನಿವಾಸಿ ಮೋನಿಷ್ (21) ಅವರು ನೀಡಿದ ದೂರಿನಂತೆ, ಜುಲೈ 10ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಡಬ ಗ್ರಾಮದ ಕಾಲೇಜು ರಸ್ತೆ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಎಂಬವರು ಮದುವೆ ವಿಚಾರಕ್ಕೆ ಸಂಬಂಧಿಸಿ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 84/2026 ದಾಖಲಿಸಲಾಗಿದೆ.
ಇದೇ ಘಟನೆಯ ಸಂಬಂಧ ಕುಟ್ರುಪ್ಪಾಡಿ ನಿವಾಸಿ ದೀಪಕ್ (33) ಅವರು ಸಹ ಪ್ರತಿದೂರು ನೀಡಿದ್ದು, ಮೋನಿಷ್ ತನ್ನನ್ನು ತಡೆದು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 85/2026 ದಾಖಲಿಸಲಾಗಿದೆ.
ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
























