ಪುತ್ತೂರು: ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಶನಿವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಭರವಸೆ ನೀಡಿದ್ದಾರೆ.
ಸೋಮವಾರ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಶಾಸಕ ಅಶೋಕ್ ರೈ ಚರ್ಚೆ ನಡೆಸಿದರು.
ಈ ವೇಳೆ ರಿಕ್ಷಾ ಚಾಲಕರು ತಮ್ಮ ಸಮಸ್ಯೆಗಳು ಮತ್ತು ಆತಂಕಗಳನ್ನು ಶಾಸಕರ ಗಮನಕ್ಕೆ ತಂದರು.
ಚಾಲಕರ ಮನವಿಯನ್ನು ಆಲಿಸಿದ ಶಾಸಕ ಅಶೋಕ್ ರೈ, ಯಾವುದೇ ನಿರ್ಧಾರದಿಂದ ರಿಕ್ಷಾ ಚಾಲಕರ ಜೀವನೋಪಾಯಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಎಲ್ಲರ ಅಭಿಪ್ರಾಯವನ್ನು ಪರಿಗಣಿಸಿ, ಕಾನೂನು ಹಾಗೂ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ಪಾರ್ಕಿಂಗ್ ಸ್ಥಳ ಗುರುತಿಸಿ ಶನಿವಾರದೊಳಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಯಿತು. ರಿಕ್ಷಾ ಚಾಲಕರಿಗೆ ಅನುಕೂಲವಾಗುವ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮುಂದುವರಿಸುವ ಕುರಿತು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಲಾಯಿತು.


























