ಬಿಸಿ ರೋಡ್: ಬಿಸಿ ರೋಡಿನಲ್ಲಿ ಹತ್ಯೆಗೀಡಾದ ಲಾವಣ್ಯ ಅವರ ಮೃತದೇಹದ ಅಂತಿಮ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ ಅವರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ತೀವ್ರ ಆತಂಕ ಹಾಗೂ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಿ, ಕಾನೂನಿನ ಪ್ರಕಾರ ಶೀಘ್ರ ಮತ್ತು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಅಲ್ಲದೆ, ಹತ್ಯೆಗೀಡಾದ ಲಾವಣ್ಯ ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪ್ರಕರಣದ ಶೀಘ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ ಎಂದು ಅವರು ಹೇಳಿದರು.

























