ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವ ರೀತಿಯಲ್ಲಿ ಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಿ, ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಸಾಮಾಜಿಕ ಜಾಲತಾಣ ಘಟಕ ದೂರು ನೀಡಿದೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ, ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ಅವರು ದೂರು ಸಲ್ಲಿಸಿದರು.
ದೂರಿನಲ್ಲಿ, ಬಂಟ್ವಾಳದಲ್ಲಿ ನಡೆದ ಘಟನೆಯೊಂದಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಂಬಂಧವಿದೆ ಎಂಬ ಅರ್ಥ ಬರುವಂತೆ ಬರಹಗಳು ಹಾಗೂ ಭಾವಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇಂತಹ ಪ್ರಚಾರದಿಂದ ಶಾಸಕ, ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮತ್ತು ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆದ್ದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಲಾಗಿದೆ.
ದೂರು ಸಲ್ಲಿಸುವ ಸಂದರ್ಭದಲ್ಲಿ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.


























