ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮದ ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆ ಸಮೀಪದ ಬಾಡಿಗೆ ಮನೆಯಲ್ಲಿ ತಮ್ಮನನ್ನು ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದಡಿ ಯುವಕನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸೋಮನಾಥ (21) ಎಂದು ಗುರುತಿಸಲಾಗಿದೆ. ಈತ ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಗ್ಯಾಳ ಗ್ರಾಮದ ನಿವಾಸಿಯಾಗಿದ್ದು, ಕಳೆದ ಐದು ವರ್ಷಗಳಿಂದ ತಾಯಿ ಶಿವಲೀಲಾ ಹಾಗೂ ತಮ್ಮ ಮಲ್ಲಿಕಾರ್ಜುನ ಜೊತೆ ಚೊಕ್ಕಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಜುಲೈ 19ರಂದು ರಾತ್ರಿ ಸುಮಾರು 11 ಗಂಟೆಗೆ ಮಲ್ಲಿಕಾರ್ಜುನ ಮೊಬೈಲ್ ಫೋನ್‌ನಲ್ಲಿ ಯುವತಿಯೊಬ್ಬಳೊಂದಿಗೆ ಮಾತನಾಡುತ್ತಿದ್ದುದನ್ನು ಸೋಮನಾಥ ವಿರೋಧಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಲ್ಲಿಕಾರ್ಜುನ ಉಡಾಫೆಯಾಗಿ ಪ್ರತಿಕ್ರಿಯಿಸಿದ್ದರಿಂದ ಸೋಮನಾಥ ಕೋಪಗೊಂಡಿದ್ದಾನೆ ಎನ್ನಲಾಗಿದೆ.
ಬಳಿಕ ಮಲ್ಲಿಕಾರ್ಜುನ ನಿದ್ರಿಸಿದ ನಂತರ ಮನೆಯಲ್ಲಿದ್ದ ಕೊಡಲಿಯಿಂದ ತಲೆ ಹಾಗೂ ಮುಖಕ್ಕೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 89/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103(1) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.
ತನಿಖೆ ವೇಳೆ ಕೃಷ್ಣಾಪುರ ಮಠ ರಸ್ತೆ ಸಮೀಪದ ಪೊದೆಯಲ್ಲಿ ಅಡಗಿ ಕುಳಿತಿದ್ದ ಸೋಮನಾಥನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ಕಾನೂನು ಕ್ರಮಗಳ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

























