ಬೆಳ್ತಂಗಡಿ: ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಸ್ನೇಹದ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ₹87.22 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಬೆಳ್ತಂಗಡಿ ನಿವಾಸಿಯಾಗಿರುವ ಪಿರ್ಯಾದಿದಾರರು ವ್ಯವಹಾರ ನಡೆಸುತ್ತಿದ್ದು, 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಅನಿಷಾ ಪಾಲನ್ನ (35) ಎಂಬ ಮಹಿಳೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು.
ದಿನಾಂಕ 26 ಸೆಪ್ಟೆಂಬರ್ 2024ರಿಂದ 20 ಜನವರಿ 2025ರವರೆಗೆ ಆರೋಪಿತೆ ವಿವಿಧ ಕಾರಣಗಳನ್ನು ನೀಡಿ ಪಿರ್ಯಾದಿದಾರರ ವಿಶ್ವಾಸ ಗಳಿಸಿ, ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹87,22,710 ಹಣವನ್ನು ವರ್ಗಾವಣೆ ಮಾಡಿಸಿಕೊಂಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಬಳಿಕ ಆರೋಪಿತೆಯು ಮೊಬೈಲ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದು, ಪಡೆದ ಹಣವನ್ನು ಹಿಂತಿರುಗಿಸದೆ ವಂಚನೆ ಎಸಗಿರುವುದಾಗಿ ಪಿರ್ಯಾದಿದಾರರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 78/2026 ದಾಖಲಿಸಿಕೊಂಡು, ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 318(4)ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.


























