ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಜು.22) ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ಮರುತನಿಖೆಗೆ ಸಮ್ಮತಿಸಿರುವ ಸುಪ್ರೀಂ ಕೋರ್ಟ್ , ವಿಚಾರಣೆ ವೇಳೆ ಸಿಬಿಐ ತನಿಖೆಯ ದಾರಿಯನ್ನು ನೋಡಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ತನಿಖೆಯ ಸ್ವರೂಪ ಹಾಗೂ ಯಾವ ಏಜೆನ್ಸಿ ಮೂಲಕ ಮರುತನಿಖೆ ನಡೆಸಬೇಕು ಎಂಬುದರ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿದ ಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಬಿಐ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಪ್ರಕರಣ ನಡೆದು 14 ವರ್ಷಗಳಾಗಿದ್ದರೂ ಸರಿಯಾದ ತನಿಖೆ ನಡೆದಿಲ್ಲ. ಸಿಐಡಿ (CID) ನೀಡಿದ್ದ ವರದಿಯನ್ನಷ್ಟೇ ಸಿಬಿಐ ಭಾಷಾಂತರಿಸಿ ಸಿದ್ದಪಡಿಸಲಾಗಿದೆ. ಹೊರತು, ಸಿಬಿಐ ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಕೆಳಹಂತದ ನ್ಯಾಯಾಲಯದಲ್ಲಿ ಇನ್ನೂ ಕೆಲವು ಆರೋಪಿಗಳ ವಿರುದ್ಧ ತನಿಖೆ ನಡೆಸಬೇಕಿದೆ ಎಂದು ಈ ಹಿಂದೆ ಹೇಳಿದ್ದ ಸಿಬಿಐ, ಈಗ ಸಿಬ್ಬಂದಿ ಕೊರತೆ ಮತ್ತು ಹಣಕಾಸಿನ ಅಭಾವ ಎಂದು ನೆಪ ಹೇಳುತ್ತಿರುವುದು ಅತ್ಯಂತ ಅಸಮಂಜಸ ಎಂದು ಪೀಠ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮರುತನಿಖೆಯನ್ನು ಎಸ್‌ಐಟಿಗೆ ವಹಿಸಬೇಕೇ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ತಂಡಕ್ಕೆ ನೀಡಬೇಕೇ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ಅಂತಿಮ ಆದೇಶದಲ್ಲಿ ವಿಸ್ತೃತವಾದ ನಿರ್ದೇಶನಗಳು ಹಾಗೂ ಮಾರ್ಗಸೂಚಿಗಳನ್ನು ನೀಡಲಿದೆ. ಇನ್ನು ನಾಳೆ ಯಾರು ಈ ತನಿಖೆಯನ್ನು ನಡೆಸಬೇಕು ಎಂಬುದನ್ನು ಸುಪ್ರೀಂ ಕೋರ್ಟ್ ತಿಳಿಸಲಿದೆ.



























