ಪುತ್ತೂರು: ಬೊಳುವಾರು–ಹಾರಾಡಿ ರಸ್ತೆ ಕಾಮಗಾರಿ ವಿಳಂಬವಾಗಿದ್ದು, ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಬೊಳುವಾರಿನಿಂದ ಹಾರಾಡಿವರೆಗೆ ಕಾಲ್ನಡಿಗೆಯಲ್ಲಿ ತೆರಳಿ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು.
ಮಾಜಿ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಡೆದ ಪರಿಶೀಲನೆ ವೇಳೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಸಮೀಪ ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರಿಂದ ಕಾಮಗಾರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಲಾಯಿತು.
ಕಾಮಗಾರಿ ಸಮರ್ಪಕವಾಗಿ ನಡೆಯದ ಕಾರಣ ಸುಮಾರು 15 ಮನೆಗಳ ಕುಡಿಯುವ ನೀರಿನ ಸಂಪರ್ಕ ಕಳೆದ ಒಂದು ತಿಂಗಳಿಂದ ಕಡಿತಗೊಂಡಿದೆ. ಅಲ್ಲದೆ, ಕಾಂಕ್ರೀಟ್ ರಸ್ತೆ ಬದಿಯಲ್ಲಿ ಮಣ್ಣು ಹಾಕದ ಕಾರಣ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದರು.
ಬಳಿಕ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪೌರಾಯುಕ್ತರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕುಡಿಯುವ ನೀರಿನ ಸಂಪರ್ಕವನ್ನು ತಕ್ಷಣ ದುರಸ್ತಿಪಡಿಸುವಂತೆ ಒತ್ತಾಯಿಸಿದರು. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಶ್ ಶೆಟ್ಟಿ ಅವರನ್ನು ಕಾಮಗಾರಿ ವಿಳಂಬದ ಕುರಿತು ಪ್ರಶ್ನಿಸಿದರು.
ಕಾಮಗಾರಿಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದರು.


























