ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗೆ ಕಡಿವಾಣ ಹಾಕುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪ್ರಮುಖ ಸ್ಥಳಗಳಲ್ಲಿ ನಿಗಾ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅವು ಗುರುವಾರ (ಜುಲೈ 23)ರಿಂದ ಕಾರ್ಯಾರಂಭ ಮಾಡಿವೆ.
ಮೊದಲ ಹಂತದಲ್ಲಿ ವಿಟ್ಲ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಈ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಈ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಹಚ್ಚಿ, ಸಂಬಂಧಿತ ವಾಹನಗಳ ಮಾಲೀಕರಿಗೆ ನಿಯಮಾನುಸಾರ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಸಾರ್ವಜನಿಕರು ರಸ್ತೆ ಸುರಕ್ಷತೆಯ ಹಿತದೃಷ್ಟಿಯಿಂದ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಸುರಕ್ಷಿತ ವಾಹನ ಚಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.



























