ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್ ಗುರುವಾರ ತಡರಾತ್ರಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ.
ವಾಂಗ್ಚುಕ್ ಅವರು ಚಿಕಿತ್ಸೆ ಪಡೆಯುತ್ತಿರುವ ಗುರುಗ್ರಾಮದ ಮೇದಾಂತ ಮೆಡಿಸಿಟಿ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವ ಜೆ.ಪಿ ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರು ವಾಂಗ್ಚುಕ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಂಗ್ಚುಕ್ ಅವರಿಗೆ ಇಬ್ಬರೂ ಸಚಿವರು ಜ್ಯೂಸ್ ಕುಡಿಸುವ ಮೂಲಕ ನಿರಶನ ಅಂತ್ಯವಾಗಿದೆ.
ಜೂ.28ರಿಂದ ಸೋನಂ ವಾಂಗ್ಚುಕ್ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದರು. ನನ್ನ ಉಪವಾಸ ಕೊನೆಗೊಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಎಲ್ಲರಿಗೂ ಧನ್ಯವಾದ ಎಂದು ಜೆ.ಪಿ ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರ ಕೈ ಹಿಡಿದು ಸೋನಂ ವಾಂಗ್ಚುಕ್ ಹೇಳಿದ್ದಾರೆ. ಈ ವೇಳೆ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಕೂಡ ಉಪಸ್ಥಿತರಿದ್ದರು. ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾನು ಉಪವಾಸ ಕೈಬಿಡಬೇಕಾದರೆ ಕೇಂದ್ರ ಸರ್ಕಾರ ಸಂಸತ್ ಚಲೋ ಹೋರಾಟ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಬುಧವಾರವಷ್ಟೇ ವಾಂಗ್ಚುಕ್ ಷರತ್ತು ವಿಧಿಸಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಕೇಂದ್ರ ಸಚಿವರು, ಸಂಸತ್ ಚಲೋದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಲಿಖಿತ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.



























