ಬಂಟ್ವಾಳ, ಜು.24: ಕಳವು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 76/2016ರಡಿ ಭಾರತೀಯ ದಂಡ ಸಂಹಿತೆ (IPC) ಕಲಂ 379ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಿಹಾರ ರಾಜ್ಯದ ವೈಶಾಲಿ ನಿವಾಸಿ ಸಂಜಯ್ ಸಹಾನಿ (48) ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯನ್ನು ಪತ್ತೆಹಚ್ಚಿದ ಬಂಟ್ವಾಳ ನಗರ ಠಾಣೆ ಪೊಲೀಸರು ಜುಲೈ 24, 2026ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ.



























