ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಕ್ಕಿ ಬಬ್ಬಲ್ ಎಂಬವರು ಮಧ್ಯಾಹ್ನ ಸುಮಾರು 1:45 ಗಂಟೆ ವೇಳೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಬೈಕ್‌ನಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ವಿಕ್ಕಿ ಬಬ್ಬನ್ ಅವರ ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಲಿದ್ದು, ಪೂರ್ವ ಉಪವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕರಣದ ತನಿಖೆ ನಡೆಸಲಿದ್ದಾರೆ.



























