ಪುರುಷರಕಟ್ಟೆ–ಶಾಂತಿಗೋಡು ರಸ್ತೆಯನ್ನು ತಕ್ಷಣ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಜುಲೈ 30ರಿಂದ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಲಾಗಿದೆ.
ಟ್ರಸ್ಟ್ ಅಧ್ಯಕ್ಷ ಹಾಗೂ ಕಾರ್ಯಕರ್ತರು ಈ ಕುರಿತು ನೀಡಿದ ಪತ್ರದಲ್ಲಿ, ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರು, ವಿದ್ಯಾರ್ಥಿಗಳು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು 2026ರ ಜುಲೈ 23ರಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದಾರೆ.
ಜುಲೈ 27ರಂದು ರಸ್ತೆಯಲ್ಲೇ ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ ಸೆಳೆದರೂ ಸಮಸ್ಯೆಗೆ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಧರಣಿ ನಡೆಸುವ ಅನಿವಾರ್ಯತೆ ಎದುರಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಆದ್ದರಿಂದ, ಜುಲೈ 30ರಂದು ಬೆಳಿಗ್ಗೆ 10 ಗಂಟೆಯಿಂದ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸುವವರೆಗೆ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ತಿಳಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಸಂಘಟನೆ ಆಗ್ರಹಿಸಿದೆ.



























