ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಕಾರಾವಾಸ
ಮಂಗಳೂರು, ಜುಲೈ 31: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಅತ್ಯಾಚಾರ ಎಸಗಿ, ಆಕೆಯ ಖಾಸಗಿ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾವಾಸ ಹಾಗೂ ವಿವಿಧ ಕಲಂಗಳಡಿ ದಂಡ ವಿಧಿಸಿದೆ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 130/2025ರ ಪ್ರಕರಣದ ಆರೋಪಿ ಸೋನು ಮ್ಯಾಕ್ಲಿನ್ ನೊರೊನ್ಹ (20), ದೇವಿನಗರ, ಕುಂಜತ್ತಬೈಲ್ ನಿವಾಸಿ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರದಂತೆ, ಆರೋಪಿ 2024ರ ಫೆಬ್ರವರಿಯಿಂದ ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನೆಪದಲ್ಲಿ ಪರಿಚಯ ಬೆಳೆಸಿ, ಆಕೆಯನ್ನು ಮನವೊಲಿಸಿ 2024ರ ಸೆಪ್ಟೆಂಬರ್‌ನಲ್ಲಿ ಶಕ್ತಿನಗರದ ಬಾಡಿಗೆ ಮನೆಯಲ್ಲಿ ಹಾಗೂ 2024ರ ನವೆಂಬರ್‌ನಿಂದ 2025ರ ಜೂನ್ ಅವಧಿಯಲ್ಲಿ ಅಳಪೆ ಗ್ರಾಮದ ಮನೆಯೊಂದರಲ್ಲಿ ಪದೇಪದೇ ಅತ್ಯಾಚಾರ ಎಸಗಿದ್ದನು.
ಇದೇ ವೇಳೆ, ಬಾಲಕಿ ಸ್ನಾನ ಮಾಡುತ್ತಿದ್ದ ಸಂದರ್ಭ ವೀಡಿಯೊ ಕರೆ ಮೂಲಕ ಆಕೆಯ ಖಾಸಗಿ ದೃಶ್ಯಗಳ ಸ್ಕ್ರೀನ್‌ಶಾಟ್‌ಗಳನ್ನು ತನ್ನ ಮೊಬೈಲ್‌ನಲ್ಲಿ ಸಂಗ್ರಹಿಸಿಕೊಂಡಿದ್ದ ಆರೋಪಿಯು, ತನ್ನೊಂದಿಗೆ ದೈಹಿಕ ಸಂಪರ್ಕ ಮುಂದುವರಿಸದಿದ್ದರೆ ಆ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಬಾಲಕಿ, ಆಕೆಯ ತಾಯಿ ಮತ್ತು ಅಕ್ಕನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದನು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.
ಪ್ರಕರಣದ ತನಿಖೆಯನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ನಡೆಸಿ, ಪ್ರಬಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2)ದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ, ಪೋಕ್ಸೋ ಕಾಯ್ದೆಯ ಕಲಂ 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾವಾಸ ಮತ್ತು ₹50,000 ದಂಡ ವಿಧಿಸಿದ್ದಾರೆ. ಅಲ್ಲದೆ, BNS ಕಲಂ 77, ಪೋಕ್ಸೋ ಕಾಯ್ದೆಯ ಕಲಂ 15 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(E) ಅಡಿಯಲ್ಲಿ ತಲಾ ಒಂದು ವರ್ಷದ ಕಾರಾವಾಸ ಹಾಗೂ ₹5,000 ದಂಡವನ್ನೂ ವಿಧಿಸಿ ಆದೇಶಿಸಿದ್ದಾರೆ.



























