ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಘಟಕದ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಲು ಶಾಸಕ ಅಶೋಕ್ ರೈ ಅವರು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.
ಈ ವೇಳೆ ಕಾಮಗಾರಿಯ ವಿವಿಧ ಹಂತಗಳನ್ನು ಪರಿಶೀಲಿಸಿದ ಶಾಸಕ ಅಶೋಕ್ ರೈ ಅವರು ಯೋಜನೆಯ ಪ್ರಗತಿ ಕುರಿತು ಇಂಜಿನಿಯರ್‌ಗಳೊಂದಿಗೆ ಚರ್ಚೆ ನಡೆಸಿ ಅಗತ್ಯ ಮಾಹಿತಿಯನ್ನು ಪಡೆದುಕೊಂಡರು. ಕಾಮಗಾರಿ ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಅಶೋಕ್ ರೈ ಅವರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡ ಬಳಿಕ ಈ ಭಾಗದ ಹಲವು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದ್ದು, ಜನರ ಬಹುಕಾಲದ ಬೇಡಿಕೆ ಈಡೇರುವ ವಿಶ್ವಾಸ ವ್ಯಕ್ತಪಡಿಸಿದರು. ಯೋಜನೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.



























