ಮಂಗಳೂರು:ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಇದು ರ್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ನಗರದ ಗುಜ್ಜರಕೆರೆ ಸಮೀಪದ ಚಹಾ ಅಂಗಡಿ ಬಳಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಪ್ರಕರಣ ರ್ಯಾಗಿಂಗ್‌ಗೆ ಸಂಬಂಧಿಸಿದದ್ದೇ ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.




























