ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.
ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳ ತಂಡ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್‌ನನ್ನು ವಶಕ್ಕೆ ಪಡೆಯಲಾಗಿದೆ. ಈತನ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದ ಆರೋಪಿಗಳ ಒಟ್ಟು ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ವಿರುದ್ಧ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ (RCN) ಹಾಗೂ ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ ವಾರಂಟ್ (NBW) ಜಾರಿಯಾಗಿತ್ತು. ಈತನ ಬಂಧನಕ್ಕೆ ನೆರವಾಗುವ ಸುಳಿವು ನೀಡಿದವರಿಗೆ ಎನ್‌ಐಎ 2 ಲಕ್ಷ ರೂಪಾಯಿ ಬಹುಮಾನವನ್ನು ಕೂಡ ಘೋಷಿಸಿತ್ತು.
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನು ಇಬ್ಬರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನುಪತ್ತೆ ಹಚ್ಚಿ ಬಂಧಿಸಲು ತನಿಖಾ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.




























