ಬಂಟ್ವಾಳ, ಆ.6: ಬಂಟ್ವಾಳದ ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಸಹಸವಾರ ಮೃತಪಟ್ಟಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ.
ಗುರುವಾರ ಸಂಜೆ 6.30ರ ಸುಮಾರಿಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಬರುತ್ತಿದ್ದ KA-19-AF-8073 ನೋಂದಣಿಯ ಟಿಪ್ಪರ್ ಲಾರಿಯು, ಚಾಲಕ ಸಲ್ಮಾನ್ ಫಾರುಕ್ (33), ಪಲ್ಲಮಜಲು, ಬಂಟ್ವಾಳ ನಿವಾಸಿ, ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ, ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ KA-70-H-5059 ನೋಂದಣಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಸ್ಕೂಟರ್ ಸವಾರ ದಯಾನಂದ ಹಾಗೂ ಸಹಸವಾರ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶ್ವಂತ್ ಕುಲಾಲ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ದಯಾನಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 99/2026ರಡಿ ಬಿಎನ್‌ಎಸ್‌ನ ಕಲಂ 281, 125(ಎ) ಹಾಗೂ 106(1) ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ಅಪಘಾತಕ್ಕೆ ಕಾರಣ ಎನ್ನಲಾದ ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.




























