ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.
ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್, ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಕೆಳಭಾಗಕ್ಕೆ ಚಲಿಸಿದೆ ಎನ್ನಲಾಗಿದೆ. ಬಳಿಕ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಘಟನೆ ವೇಳೆ ಬಸ್ಸಿನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಡಿಕ್ಕಿಯ ರಭಸಕ್ಕೆ ಬಸ್‌ಗೆ ಹಾನಿಯಾಗಿದ್ದು, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ. ಘಟನೆಗೆ ಬಸ್‌ನ ತಾಂತ್ರಿಕ ದೋಷವೇ ಕಾರಣ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



























