ಕೂಟೇಲು ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಸಮಸ್ಯೆ ಹಾಗೂ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದ ಗೊಂದಲದ ಕುರಿತು ಸ್ಥಳೀಯ ನಾಗರಿಕರು ಗಮನ ಸೆಳೆದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಕ್ಷಣ ಸ್ಪಂದಿಸಿದ್ದಾರೆ. ಸಮಸ್ಯೆಯನ್ನು ಸಂಸದರ ಗಮನಕ್ಕೆ ತರಲಾಗುತ್ತಿದ್ದಂತೆಯೇ ಸಂಬಂಧಪಟ್ಟ ಇಂಜಿನಿಯರ್ ಹಾಗೂ ಪ್ರಸನ್ನ ದರ್ಬೆ ಅವರನ್ನು ಸ್ಥಳಕ್ಕೆ ಕಳುಹಿಸಿ, ರಸ್ತೆ ಸಮಸ್ಯೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸುವಂತೆ ಸೂಚಿಸಿದರು.
ಇದರಂತೆ ಇಂದು ಸ್ಥಳಕ್ಕೆ ಭೇಟಿ ನೀಡಿದ ಸಂಬಂಧಪಟ್ಟ ಇಂಜಿನಿಯರ್ ಅವರು ರಸ್ತೆಯ ಸಮಸ್ಯೆ ಹಾಗೂ ಸ್ಥಳೀಯರ ಅಹವಾಲುಗಳನ್ನು ಪರಿಶೀಲಿಸಿ, ಸಮಸ್ಯೆಯ ಕುರಿತು ತಮಗೆ ಸಂಪೂರ್ಣ ಮನವರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಉನ್ನತ ಅಧಿಕಾರಿಗಳ ಗಮನಕ್ಕೆ ತಂದು, ರಸ್ತೆಯ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವುದರ ಜೊತೆಗೆ ಅಗತ್ಯವಿರುವ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೊಳ್ಳುವುದಾಗಿ ಸ್ಥಳೀಯ ನಾಗರಿಕರಿಗೆ ಭರವಸೆ ನೀಡಿದ್ದಾರೆ.
ಸ್ಥಳೀಯರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ, ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಾರ್ಯವೈಖರಿಗೆ ಸ್ಥಳೀಯ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿ, ಧನ್ಯವಾದ ಸಲ್ಲಿಸಿದ್ದಾರೆ.



























