ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್ ನಿಲ್ದಾಣದಿಂದ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಪ್ರಯಾಣಿಸುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್ 2023ರ ಕಲಂ 351(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು, ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




























