ಬೆಳ್ತಂಗಡಿ : ದ.ಕ ಜಿಲ್ಲೆಯಲ್ಲಿ ಕೊರೊನಾ ಕಾರಣದಿಂದ ಹೇರಲಾಗಿರುವ ಲಾಕ್ ಡೌನ್ ಸಡಿಲಿಕೆಯ ಬಗ್ಗೆ ಜು.1ರಂದು ಸರಕಾರದ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿ, ” ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗುತ್ತಿದ್ದು, ಜಿಲ್ಲೆಯಲ್ಲಿ ಇದೀಗ ಕೊರೊನಾ ಪಾಸಿಟಿವಿಟಿ ದರ ಐದರ ಕೆಳಗೆ ಬಂದಿದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ವಿನಂತಿಸಲಾಗಿದೆ. ಜಿಲ್ಲೆಯಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಹಾಗೂ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡಿ ಲಾಕ್ ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಇಂದು ಸಂಜೆ ಅಥವಾ ಗುರುವಾರ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಅವರು ತಿಳಿಸಿದ್ದಾರೆ.