ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಭಯಭೀತಿಗೊಳಿಸಿದ ಆರೋಪದ ಮೇರೆಗೆ 47 ವರ್ಷದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 16 ವರ್ಷದ ಬಾಲಕಿಯನ್ನು ಕೆಲ ದಿನಗಳಿಂದ ಮಧ್ಯವಯಸ್ಕ ಅಪರಿಚಿತ ವ್ಯಕ್ತಿಯೊಬ್ಬ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ.
ಆ.19ರಂದು ಸಂಜೆ ಬಾಲಕಿ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ, ಅದೇ ವ್ಯಕ್ತಿ ಅಲ್ಲಿಯೂ ಬಾಲಕಿಯನ್ನು ಗಮನಿಸುತ್ತಿರುವುದನ್ನು ಕಂಡು ಭಯಗೊಂಡಿದ್ದಾಳೆ. ಬಳಿಕ ಬಾಲಕಿ ತನ್ನ ತಾಯಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ವಿಷಯ ತಿಳಿಸಿದ್ದಾಳೆ.
ಬಾಲಕಿಯ ತಾಯಿ ಕಚೇರಿ ಮಾಲೀಕರೊಂದಿಗೆ ಬಸ್ ನಿಲ್ದಾಣಕ್ಕೆ ತೆರಳಿದಾಗ, ಆರೋಪಿತ ವ್ಯಕ್ತಿ ಅಲ್ಲಿಯೇ ಇದ್ದ ಎನ್ನಲಾಗಿದೆ. ಆತನನ್ನು ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂದು ತಿಳಿಸಿ ಅಲ್ಲಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 116/2026ರಂತೆ ಬಿಎನ್‌ಎಸ್ 2023ರ ಕಲಂ 78 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ತನಿಖೆಯ ವೇಳೆ ಬಂಟ್ವಾಳ ಸರಪಾಡಿ ನಿವಾಸಿ ಜಯಂತ್ (47) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.





























