ಬೆಳ್ತಂಗಡಿ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ವೇಣೂರು ಪೊಲೀಸರು ಜಮಾಲುದ್ದೀನ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸ್ ಪ್ರಕಟಣೆಯ ಪ್ರಕಾರ, ಸಂತ್ರಸ್ತ ಬಾಲಕಿ ಕೆಲವು ತಿಂಗಳುಗಳಿಂದ ಆರೋಪಿಯ ರಿಕ್ಷಾದಲ್ಲಿ ಶಾಲೆಗೆ ತೆರಳಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಾಲಕಿ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಭಯಗೊಂಡ ಬಾಲಕಿ ಈ ವಿಚಾರವನ್ನು ಯಾರಿಗೂ ತಿಳಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ಬಂದು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ಆಗಸ್ಟ್ 15ರಂದು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 56/2026ರಂತೆ BNS 2023ರ ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 4(2), 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಆಗಸ್ಟ್ 15ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಕರಣದ ತನಿಖೆ ಮುಂದುವರಿದಿದೆ.





























