ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಶರತ್ (33) ಎಂಬಾತನನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಲ್ಮಂಜ ನಿವಾಸಿ ಬಾಲಕೃಷ್ಣ (43) ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ ಕೆಲವು ತಿಂಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಜುಲೈ 30ರಂದು ಸಂಜೆ ಬಾಲಕೃಷ್ಣ ಅವರು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಆರೋಪಿಯು ಟಾಟಾ ಸುಮೊ (KA 05 AD 6341) ವಾಹನದಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದು ಧರ್ಮಸ್ಥಳ ಗ್ರಾಮದ ಕುರುಮಾನಿ ಕ್ರಾಸ್ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಡಿಕ್ಕಿಯ ಪರಿಣಾಮ ಬಾಲಕೃಷ್ಣ ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 52/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 109ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಆಗಸ್ಟ್ 22ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





























