ಪುತ್ತೂರು: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆ ಹೆಚ್ಚಿಸುವ ಉದ್ದೇಶದಿಂದ ಸೋಮವಾರ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು.
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹಬ್ಬದ ಪ್ರಯುಕ್ತ ಬಹುತೇಕ ಅಂಗಡಿಗಳು ಸ್ವಾಭಾವಿಕವಾಗಿ ಮುಚ್ಚಿರುವ ಸಾಧ್ಯತೆಯಿದೆ. ಆದರೆ ಇದರ ಹೊರತಾಗಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಸಂಬಂಧಪಟ್ಟವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ ಹಾಗೂ ರಾಜಕೀಯ ಪ್ರಭಾವಗಳನ್ನು ಪರಿಗಣಿಸದೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಯಾರಿಗಾದರೂ ಚರ್ಚೆ ಅಥವಾ ಸ್ಪಷ್ಟನೆ ಅಗತ್ಯವಿದ್ದಲ್ಲಿ ಪೊಲೀಸರೊಂದಿಗೆ ಮುಕ್ತವಾಗಿ ಚರ್ಚಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.





























