ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು 18ಕ್ಕೆ 18 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ನಿರ್ದೇಶಕರಾಗಿ ಆಯ್ಕೆಯಾದ ಮೊದಲ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪಾತ್ರರಾಗಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಶಶಿಕುಮಾರ್ ರೈ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಹಾಗೂ ಇರ್ದೆ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ.
ಇದೀಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಸಾಧನೆಯಾಗಿದೆ. 18ಕ್ಕೆ 18 ಮತಗಳನ್ನು ಪಡೆಯುವ ಮೂಲಕ ಸರ್ವಾನುಮತದ ಬೆಂಬಲದೊಂದಿಗೆ ಆಯ್ಕೆಯಾಗಿರುವುದು ಅವರ ಸಹಕಾರಿ ಕ್ಷೇತ್ರದ ಸೇವೆ ಹಾಗೂ ನಾಯಕತ್ವಕ್ಕೆ ದೊರೆತ ಮಾನ್ಯತೆ ಎಂದು ಸಹಕಾರ ಕ್ಷೇತ್ರದ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಶಶಿಕುಮಾರ್ ರೈ ಬಾಲ್ಯೊಟ್ಟು ಅವರ ಈ ಐತಿಹಾಸಿಕ ಗೆಲುವಿಗೆ ಜಿಲ್ಲೆಯ ಸಹಕಾರ ಕ್ಷೇತ್ರದ ಪ್ರಮುಖರು, ವಿವಿಧ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.




























