ಪುತ್ತೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ರೂ.3.05 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ಕಡಬ ಪೊಲೀಸ್ ಠಾಣೆಯ ಅಪರಾಧ ಪ್ರಕರಣ ಸಂಖ್ಯೆ 06/2020ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 354A, 509, 504, 506, 448, 307 ಹಾಗೂ 326A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಆಗಿನ ತನಿಖಾಧಿಕಾರಿ ಹಾಗೂ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ಅವರು, ಆರೋಪಿ ಕಡಬ ಕೊಡಿಂಬಳ ನಿವಾಸಿ ಜಯಾನಂದ ಕೆ. (60) ವಿರುದ್ಧ ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಪುತ್ತೂರಿನಲ್ಲಿ ನಡೆದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಕಲಂ 326A ಅಡಿಯಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗಿದೆ.
ಅದೇ ರೀತಿ ಕಲಂ 504 ಅಡಿಯಲ್ಲಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ ರೂ.5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಜಯಂತಿ ಕೆ. ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.





























