ಪುತ್ತೂರು: ಆಗಸ್ಟ್ 31ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಅನುಮತಿ ಕೋರಿ ಸಂಘಟನೆಯೊಂದು ಇಂದು ಬೆಳಿಗ್ಗೆ ಅರ್ಜಿ ಸಲ್ಲಿಸಿದೆ. ಆದರೆ ಅರ್ಜಿಯಲ್ಲಿ ಸೂಚಿಸಿರುವ ಪ್ರತಿಭಟನಾ ಸ್ಥಳವು ಸರ್ಕಾರದ ಮಾರ್ಗಸೂಚಿಗಳಿಗೆ (Guidelines) ಅನುಗುಣವಾಗಿಲ್ಲ ಎಂದು ತಿಳಿಸಿರುವ ಅಧಿಕಾರಿಗಳು, ಸೂಕ್ತ ಸ್ಥಳವನ್ನು ಗುರುತಿಸಿ ಮರು ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಸರ್ಕಾರದ ಮಾರ್ಗಸೂಚಿಗಳ ಪ್ರತಿಯನ್ನು ಅರ್ಜಿದಾರರಿಗೆ ನೀಡಲಾಗಿದ್ದು, ನಿಯಮಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
ಇದೇ ವೇಳೆ, ಮತ್ತೊಂದು ಸಂಘಟನೆಯು ಆಗಸ್ಟ್ 31ರಂದು ಪುತ್ತೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಸಂಘಟನೆಯು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅನುಮತಿ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಸಂಬಂಧಿತ ಸಂಘಟನೆಯು ಅನುಮತಿಗಾಗಿ ಅರ್ಜಿ ಸಲ್ಲಿಸಿದಲ್ಲಿ, ಆಗಸ್ಟ್ 31ರ ಬದಲಾಗಿ ಬೇರೆ ದಿನಾಂಕ ನಿಗದಿಪಡಿಸಿ ನಿಯಮಾನುಸಾರ ಅನುಮತಿ ಪಡೆಯಲು ಸೂಚಿಸಲಾಗುವುದು ಎಂದು ಇಲಾಖೆ ತಿಳಿಸಿದೆ.
ಸಾರ್ವಜನಿಕರು ಪ್ರತಿಭಟನೆ ಸೇರಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ, ಕಾರ್ಯಕ್ರಮದ ಆಯೋಜಕರು ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಅನುಮತಿ ಪಡೆದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಅನುಮತಿಯಿಲ್ಲದೆ ನಡೆಯುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮುನ್ನ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.





























