ಕಡಬ: ಹಣವನ್ನು ಪಣವಾಗಿಟ್ಟು ಅಂದರ್–ಬಾಹರ್ ಇಸ್ಪೀಟ್ ಆಟವಾಡುತ್ತಿದ್ದ ಸ್ಥಳದ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದು ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಆ.28ರಂದು ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆನೆರೆಂಕಿ ಗ್ರಾಮದ ಕುನ್ನಿಕು ಎಂಬಲ್ಲಿ ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಮೋಹನದಾಸ್ ರೈ ಎಂಬವರ ಜಾಗದಲ್ಲಿ ಹಣ ಪಣವಾಗಿಟ್ಟು ಇಸ್ಪೀಟ್ ಆಟ ನಡೆಯುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ದಾಳಿ ನಡೆಸುತ್ತಿದ್ದಂತೆ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಹಲವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ಕಡಬ ಕುದ್ಮಾರು ನಿವಾಸಿ ಗುರುವ (44) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳ ಪರಿಶೀಲನೆ ವೇಳೆ ಇಸ್ಪೀಟ್ ಆಟಕ್ಕೆ ಬಳಸುತ್ತಿದ್ದ ಕಾರ್ಡ್‌ಗಳು, ₹1,700 ನಗದು ಹಾಗೂ ಆರೋಪಿಗಳು ಸ್ಥಳದಲ್ಲೇ ಬಿಟ್ಟು ಹೋಗಿದ್ದ ಎರಡು ದ್ವಿಚಕ್ರ ವಾಹನಗಳು ಮತ್ತು ಒಂದು ಕಾರು ಪತ್ತೆಯಾಗಿವೆ. ಪೊಲೀಸರು ಅವುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 102/2026, ಕಲಂ 78, 80 ಕೆಪಿ ಕಾಯ್ದೆ ಹಾಗೂ 112 ಬಿಎನ್‌ಎಸ್-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





























