ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸೆಪ್ಟೆಂಬರ್ 1ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತರನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 1ರ ಸಂಜೆ ಪಣಕಜೆ ಸಮೀಪ ಟೆಂಪೋದ ಹಿಂಭಾಗಕ್ಕೆ ರಿನ್ಸ್ ಶಿಬಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ರಸ್ತೆಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಿನ್ಸ್ ಶಿಬಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಯುವ ಕಾಂಗ್ರೆಸ್‌ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ರಿನ್ಸ್ ಅವರ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.





























