ವಿಟ್ಲ: ಬಂಟ್ವಾಳ ತಾಲೂಕಿನ ಸಾರಡ್ಕ ಚೆಕ್ ಪೋಸ್ಟ್ ಹಾಗೂ ವಿಟ್ಲ ಪೊಲೀಸ್ ಠಾಣೆಗೆ ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕ ಆರ್. ಚೇತನ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡರು.
ಕೇರಳ – ಕರ್ನಾಟಕ ಸಂಪರ್ಕಿಸುವ ಈ ಸಾರಡ್ಕ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಅವರು ಅಲ್ಲಿನ ಭದ್ರತಾ ವ್ಯವಸ್ಥೆ ವಾಹನಗಳ ತಪಾಸಣೆ ಹಾಗೂ ಗಡಿಭಾಗದಲ್ಲಿ ಪೊಲೀಸರ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಗಡಿಭಾಗದ ಪ್ರಮುಖ ಸಂಪರ್ಕ ರಸ್ತೆಗಳು ಹಾಗೂ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಮೂಲಕ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ಅಂತಹ ಕೃತ್ಯ ಕಂಡುಬಂದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಆರಂಭದಲ್ಲಿ ಸಾರಡ್ಕ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಅವರು ಬಳಿಕ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಅರುಣ್ ಕುಮಾರ್, ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.





























