ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಲಿಸುತ್ತಿದ್ದ ವೇಳೆಯೇ ಬೆಂಕಿಗಾಹುತಿಯಾದ ಘಟನೆ ಸೆ. 5ರ ತಡರಾತ್ರಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರ್ಮಾಯಿಲ್‌ನಲ್ಲಿ ನಡೆದಿದೆ.
ಬಸ್‌ನಲ್ಲಿ ಹಠಾತ್ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಸಮಯಪ್ರಜ್ಞೆ ಮೆರೆದು ಕೂಡಲೇ ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬಳಿಕ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಕ್ಷಣ ಕೆಳಗಿಳಿಯುವಂತೆ ಸೂಚನೆ ನೀಡಿದ್ದಾರೆ.
ಚಾಲಕನ ಸಮಯೋಚಿತ ಕ್ರಮದಿಂದ ಬಸ್‌ನಲ್ಲಿದ್ದ ಎಲ್ಲ 37 ಪ್ರಯಾಣಿಕರೂ ಸುರಕ್ಷಿತವಾಗಿ ಕೆಳಗಿಳಿದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರು ಬಸ್‌ನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು, ಬಸ್ ಧಗಧಗನೆ ಹೊತ್ತಿ ಉರಿದು ಸಂಪೂರ್ಣವಾಗಿ ಜಖಂಗೊಂಡಿದೆ.
ಅಗ್ನಿಶಾಮಕ ದಳ, ಪೊಲೀಸರ ಭೇಟಿ
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಬಸ್ ಸಿಬ್ಬಂದಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟರಲ್ಲಾಗಲೇ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು.
ಕಡಬ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.





























