ನೆಲ್ಯಾಡಿ, ಸೆ. 8: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ನೆಲ್ಯಾಡಿ ಗ್ರಾಮದ ವಿದ್ಯಾನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ‘ನೆಲ್ಯಾಡಿ ಯು-ಟರ್ನ್’ ಹೋರಾಟ ಸಮಿತಿ ವತಿಯಿಂದ ಸೆ. 9ರಂದು ಪ್ರತಿಭಟನೆ ನಡೆಯಲಿದೆ.
ಸೆ. 9ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೆಲ್ಯಾಡಿ ಗಾಂಧೀ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಪೊಲೀಸ್ ಇಲಾಖೆ ಷರತ್ತುಬದ್ಧ ಅನುಮತಿ ನೀಡಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟು ಮಾಡದಂತೆ ಪ್ರತಿಭಟನೆ ನಡೆಸುವುದಾಗಿ ಸಂಘಟಕರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ‘ರಸ್ತೆ ತಡೆ ನಡೆಸಲಾಗುವುದು’ ಎಂಬ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದಲ್ಲಿ ಸಂಘಟಕರು, ಆಯೋಜಕರು ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.



























