ಪುತ್ತೂರು: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಫಿರ್ಯಾದಿದಾರರು, ಸೆ. 2ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಕೆಲವು ಬಟ್ಟೆಗಳು ಕಾಣೆಯಾಗಿರುವುದನ್ನು ಗಮನಿಸಿದ್ದರು. ಈ ಕುರಿತು ವಿದ್ಯಾರ್ಥಿನಿಯರು ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದರು.
ನಂತರ ವಿದ್ಯಾರ್ಥಿನಿಲಯದಲ್ಲಿನ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸೆ. 2ರಂದು ಬೆಳಗಿನ ಜಾವ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಪತ್ತೆಯಾಗಿತ್ತು.
ಈ ಬಗ್ಗೆ ಸೆ. 5ರಂದು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 54/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 331(4), 305ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಸೆ. 7ರಂದು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ. 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.



























