ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮಂಗಳೂರು ಬಜಾಲ್ ನಂತೂರು ನಿವಾಸಿ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್ (34) ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 24/2020ರಲ್ಲಿ ಐಪಿಸಿ ಕಲಂ 143, 147, 148, 504, 323, 324, 506, 427 ಹಾಗೂ 149 ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ನಾಶ ಹಾಗೂ ನಷ್ಟ ತಡೆ ಕಾಯ್ದೆಯ ಕಲಂ 2(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿಯು ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಸೆ.15ರಂದು ವಿದೇಶದಿಂದ ಮಂಗಳೂರಿಗೆ ಮರಳುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.



























