ಬೆಳ್ತಂಗಡಿ: ಕಟ್ಟಡ ತೆರವುಗೊಳಿಸುವ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್‌ನ ಅವಶೇಷವೊಂದು ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಯುವ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ನಗರದ ಮೂರು ಮಾರ್ಗದ ಸಮೀಪ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಟ್ಟಡದ ಮೇಲ್ಭಾಗದಲ್ಲಿ ರಾಡ್‌ಗಳ ಸಹಿತ ಸಿಮೆಂಟ್ ಭಾಗವನ್ನು ತೆರವು ಮಾಡಲಾಗುತ್ತಿತ್ತು.
ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಸಿಮೆಂಟ್‌ನ ದೊಡ್ಡ ತುಂಡು ಏಕಾಏಕಿ ಬಿದ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಝುಬೈರ್ (22) ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಷ್ಟರಲ್ಲೇ ಝುಬೈರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




























