ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) ಆದೇಶಿಸಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 141/2025ರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯ ಕಲಂ 4, 6, 8, 12, 19(1)(b), 21 ಹಾಗೂ ಬಿಎನ್‌ಎಸ್ 2023ರ ಕಲಂ 64(2)(f), 75, 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಹಾಗೂ ಇತರ ಇಬ್ಬರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ FTSC-2ರಲ್ಲಿ ನಡೆದಿದ್ದು, ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಸೆ.19ರಂದು ತೀರ್ಪು ಪ್ರಕಟಿಸಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದ್ದಾರೆ.
ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಪ್ರಕರಣದ ಪರವಾಗಿ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.



























