ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ನಿಗದಿತ ಸಮಯದ ಬಳಿಕ ಧ್ವನಿವರ್ಧಕ ಬಳಕೆ ಮಾಡಿದ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೋಭಾಯಾತ್ರೆಗೆ ರಾತ್ರಿ 10 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ನಿಗದಿತ ಸಮಯದ ಬಳಿಕ ಮೆರವಣಿಗೆಯಲ್ಲಿದ್ದ ಸ್ತಬ್ಧಚಿತ್ರಗಳ ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಲಾಗಿತ್ತು.
ಆದರೆ ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿದ್ದ ‘ಪಂಚಮುಖಿ ಫ್ರೆಂಡ್ಸ್’ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಪೊಲೀಸರು ಗಮನಿಸಿದ್ದಾರೆ. ಧ್ವನಿವರ್ಧಕ ಸ್ಥಗಿತಗೊಳಿಸುವಂತೆ ಪೊಲೀಸರು ಸೂಚಿಸಿದ್ದು, ಅದರಂತೆ ಬಂದ್ ಮಾಡಲಾಗಿತ್ತು ಎನ್ನಲಾಗಿದೆ.
ಈ ವೇಳೆ ಕಾರ್ಯಕ್ರಮಕ್ಕೆ ಸಂಬಂಧಪಡದ ಅಜಿತ್ ರೈ ಹೊಸಮನೆ ಹಾಗೂ ಇತರರು ಸ್ಥಳಕ್ಕೆ ಆಗಮಿಸಿ ಧ್ವನಿವರ್ಧಕವನ್ನು ಬಂದ್ ಮಾಡಬಾರದು ಎಂದು ಹೇಳಿ, ಪುನಃ ಧ್ವನಿವರ್ಧಕ ಬಳಸುವಂತೆ ಸ್ತಬ್ಧಚಿತ್ರದ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಧ್ವನಿವರ್ಧಕವನ್ನು ಪುನಃ ಬಳಸಲಾಗಿದ್ದು, ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಗಿತಗೊಳಿಸುವಂತೆ ಸೂಚಿಸಿದರೂ ಸೂಚನೆಯನ್ನು ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಿರ್ದೇಶನಗಳು ಹಾಗೂ ಕಾರ್ಯಕ್ರಮ ಆಯೋಜಕರಿಗೆ ಠಾಣೆಯಿಂದ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ತಿಳುವಳಿಕೆ ನೀಡಿದ್ದರೂ ಧ್ವನಿವರ್ಧಕ ಬಳಕೆ ಮುಂದುವರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ದೂರಿನಲ್ಲಿ ಕೋರಲಾಗಿದೆ. ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಬಳಿಕ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



























