ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪ್ಯದಲ್ಲಿ 2019ರ ಸೆ.3ರಂದು ನಡೆದ ಕಾರ್ತಿಕ್ ಮೆರ್ಲ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಮಾನ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ ₹3 ಲಕ್ಷ ದಂಡ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ. 107/2019ರಂತೆ ಐಪಿಸಿ ಕಲಂ 504, 341, 302 ಹಾಗೂ 212ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ ಹಾಗೂ ಪೊಲೀಸ್ ನಿರೀಕ್ಷಕ ನಾಗೇಶ್ ಕದ್ರಿ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಪ್ರೀತು @ ಪ್ರೀತೇಶ್ ಸುಲಾಯ, ಚರಣ್, ಕಿರಣ್ @ ಮಣಿ ಹಾಗೂ ಸಂತು @ ಸ್ಟಿವನ್ ಮಾಂತೇರೋ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಯ್ಕ್ ಅವರು ಪ್ರೀತು @ ಪ್ರೀತೇಶ್ ಸುಲಾಯ ಹಾಗೂ ಕಿರಣ್ @ ಮಣಿ ವಿರುದ್ಧದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ ಹಾಗೂ ತಲಾ ₹3 ಲಕ್ಷ ದಂಡ ವಿಧಿಸಿದ್ದಾರೆ. ಐಪಿಸಿ ಕಲಂ 341ರಡಿ ಮೂರು ತಿಂಗಳ ಸಾದಾ ಶಿಕ್ಷೆ ಹಾಗೂ ತಲಾ ₹500 ದಂಡ ವಿಧಿಸಲಾಗಿದೆ.
ಪ್ರಕರಣದ ಮತ್ತೋರ್ವ ಆರೋಪಿ ಸಂತು @ ಸ್ಟಿವನ್ ಮಾಂತೇರೋ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಆರೋಪಿ ಚರಣ್ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸರ್ಕಾರಿ ಅಭಿಯೋಜಕಿ ಜಯಂತಿ ಕೆ. ಅವರು ಪ್ರಕರಣದಲ್ಲಿ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.


























